
ಕಳಸ ಲೈವ್ ವರದಿ
ಕಳಸ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಬುಧವಾರ ಕಳಸದ ಮಹಾವೀರ ವೃತ್ತದ ಸಮೀಪ ಸಮಿತಿಯ ಅಧ್ಯಕ್ಷ ಕೆ.ಎ. ಶ್ರೇಣಿಕ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಪ್ರಯೋಜನವು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಮಾಡುವ ಉದ್ದೇಶದಿಂದ ಈ ಕಚೇರಿಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುವುದು, ಅರ್ಜಿ ಸಲ್ಲಿಕೆಗೆ ಅಗತ್ಯ ಮಾರ್ಗದರ್ಶನ ಒದಗಿಸುವುದು ಹಾಗೂ ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಂಬAಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಶೀಘ್ರ ಪರಿಹಾರ ಕಲ್ಪಿಸುವುದು ಈ ಕಚೇರಿಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಯಾವುದೇ ಅರ್ಹ ವ್ಯಕ್ತಿ ಯೋಜನೆಗಳ ಸೌಲಭ್ಯದಿಂದ ವಂಚಿತರಾಗಬಾರದು. ಜನರು ತಮ್ಮ ಸಮಸ್ಯೆಗಳೊಂದಿಗೆ ನೇರವಾಗಿ ಕಚೇರಿಯನ್ನು ಸಂಪರ್ಕಿಸಿದರೆ ಅಗತ್ಯ ನೆರವು ಮತ್ತು ಮಾರ್ಗದರ್ಶನ ನೀಡಲಾಗುವುದು. ಸರ್ಕಾರದ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ಸಮಿತಿಯ ಸದಸ್ಯರು ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಕಚೇರಿಯು ಸಾರ್ವಜನಿಕರಿಗೆ ಮಾಹಿತಿ, ಸಲಹೆ ಮತ್ತು ನೆರವು ನೀಡುವ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಗ್ಯಾರಂಟಿ ಯೋಜನೆಗಳ ಕುರಿತು ಯಾವುದೇ ಗೊಂದಲ ಅಥವಾ ತೊಂದರೆ ಇದ್ದರೆ ಸಾರ್ವಜನಿಕರು ಕಚೇರಿಗೆ ಭೇಟಿ ನೀಡಿ ಪರಿಹಾರ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಾಜೇಂದ್ರ ಹೆಬ್ಬಾರ್, ವಿಶ್ವನಾಥ್, ಅಬ್ದುಲ್ ಶುಕುರ್, ಭರತರಾಜ್ ಸುಜಿತ್ ಬೆಳ್ಳ ಹಾಗೂ ಸಮಿತಿಯ ಸದಸ್ಯರಾದ ಅಬ್ದುಲ್ ಫಾರೂಕ್, ಸ್ಟೀಪನ್, ರೂಪಾಶ್ರೀ, ಮಹೇಶ್, ಸುರೇಶ್, ಶ್ರೀನಿವಾಸ ಸೇರಿದಂತೆ ಹಲವರು ಉಪಸ್ಥಿತರಿದ್ದರು.
