
ಕಳಸ ಲೈವ್ ವರದಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಶೃಂಗೇರಿ ತಾಲೂಕು, ಕಳಸ ವಲಯದ ಜ್ಞಾನವಿಕಾಸ ಕೇಂದ್ರಗಳ ಸೃಜನಶೀಲ ಕಾರ್ಯಕ್ರಮದಡಿ ಮಹಿಳಾ ಸದಸ್ಯರಿಗೆ 15 ದಿನಗಳ ಮದುಮಗಳ ಶೃಂಗಾರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಸದಾನಂದ ಬಂಗೇರ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿವಿಧ ತರಬೇತಿ ಹಾಗೂ ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಮಾತೃಶ್ರೀ ಹೇಮಾವತಿ ಅಮ್ಮನವರ ಶುಭ ಆಶೀರ್ವಾದದೊಂದಿಗೆ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಮಹಿಳೆಯರು ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಮದುಮಗಳ ಶೃಂಗಾರದ ತರಬೇತಿಯನ್ನು ಸಮರ್ಪಕವಾಗಿ ಪಡೆದುಕೊಂಡು ಮುಂದಿನ ದಿನಗಳಲ್ಲಿ ಸ್ವಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಕಳಸ ತಾಲೂಕಿನ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಮತಿ ಸುಜಯ ಸದಾನಂದ ಮಾತನಾಡಿ, ಮಹಿಳೆಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಸ್ವಉದ್ಯೋಗಕ್ಕೆ ಪೂರಕವಾದ ತರಬೇತಿ ದೊರೆಯುತ್ತಿರುವುದು ಪುಣ್ಯದ ಸಂಗತಿ. ತರಬೇತಿಯ ಸಂಪೂರ್ಣ ಪ್ರಯೋಜನ ಪಡೆದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಮಹಿಳಾ ಸದಸ್ಯರಿಗೆ ತರಬೇತಿ ನೀಡಲು ಅಂಜಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ತರಬೇತಿಯಲ್ಲಿ ಮದುಮಗಳ ಶೃಂಗಾರಕ್ಕೆ ಸಂಬಂಧಿಸಿದ ವಿವಿಧ ಕೌಶಲ್ಯಗಳ ಕುರಿತು ಪ್ರಾಯೋಗಿಕವಾಗಿ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ದಿವ್ಯ ಗಣೇಶ್, ವಲಯದ ಮೇಲ್ವಿಚಾರಕರಾದ ಮಂಜುನಾಥ್, ಸಮನ್ವಯಾಧಿಕಾರಿ ಸುನೀತಾ, ಸೇವಾ ಪ್ರತಿನಿಧಿಗಳಾದ ಉಷಾ ಹಾಗೂ ಶೋಭಾ ಸೇರಿದಂತೆ ಜ್ಞಾನವಿಕಾಸ ಕೇಂದ್ರದ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.
