




ಕಳಸ ಲೈವ್ ವರದಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯ ಸಹಯೋಗದಲ್ಲಿ ಮತದಾರರನ್ನು ಸೆಳೆಯುವ ವಿಭಿನ್ನ ಚಿಂತನೆಗಳ ಮೂಲಕ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಿದ್ದು, ಈ ಮೂಲಕ ಗುರುವಾರ ಬಾಳೆಹೊಳೆ ಭದ್ರಾ ನದಿಯಲ್ಲಿ ರಿವರ್ ರ್ಯಾಪ್ಟಿಂಗ್ ಕಾರ್ಯಕ್ರಮವನ್ನು ಮಾಡುವುದರ ಮುಖಾಂತರ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು.

ಕಾರ್ಯಕ್ರಮವನ್ನು ಜಿಲಾ ಉಪಕಾರ್ಯದರ್ಶಿ ಆತಿಕ್ ಬಾಷಾ ಉದ್ಘಾಟಿಸಿ ಮಾತನಾಡಿದರು. ಎಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಅರ್ಹ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಪ್ರಜೆಗಳಿಗೆ ನೀಡಿರುವ ಹಕ್ಕು ದೇಶದ ಆರೋಗ್ಯಕರ ಭವಿಷ್ಯಕ್ಕಾಗಿ ಪ್ರತಿಯೋಬ್ಬ ಅರ್ಹ ಮತದಾರರು ಮತದಾನ ಮಾಡಬೇಕು ಎಂದು ಹೇಳಿದರು.
ಸುಡುವ ಬಿಸಿಲಿನ ತಾಪವನ್ನು ಲೆಕ್ಕಿಸದೆ ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಯಕ್ಷಗಾನದ ವೇಷದಾರಿಗಳ ನೃತ್ಯದ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮಕ್ಕೆ ಬಂದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಜನ ಬಾಳೆಹೊಳೆಯ ಭದ್ರಾನದಿಯಲ್ಲಿ ಸುಮಾರು ಒಂದು ಕಿ.ಮೀ ರಿವರ್ ರ್ಯಾಪ್ಟಿಂಗ್ ನ ಅನುಭವವನ್ನು ಪಡೆದರು.
ಈ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಪ್ರವಾಸೋಧ್ಯಮ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.
