
ಕಳಸ ಲೈವ್ ವರದಿ
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ಹೆಚ್. ಪ್ರತೀಕ್ ಕೇರಳದ ತಿರುವನಂತಪುರದಲ್ಲಿರುವ ಕೇರಳ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 2024-25ನೇ ಸಾಲಿನ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ಪುರಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಕುವೆಂಪು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದಾರೆ.
ಹಿರೇಬೈಲಿನ ಬೂದಿಗುಂಡಿಯಲ್ಲಿ ವಾಸವಾಗಿರುವ ಕೃಷಿಕರಾದ ಹರೀಶ್ ಮತ್ತು ಬೇಬಿ ದಂಪತಿಗಳ ಪುತ್ರರಾದ ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಶಾಂತ್ಕೆ.ಜಿ.ರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದರು.
ಇತ್ತೀಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಇವರು ಕುವೆಂಪು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ವಿನಯಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿ ಪ್ರತೀಕ್ರವರ ಈ ಕ್ರೀಡಾ ಸಾಧನೆಗೆ ಸಿ.ಡಿ.ಸಿ ಕಾರ್ಯಾಧ್ಯಕ್ಷ ರಾಜೇಂದ್ರ ಹೆಬ್ಬಾರ್ ಹಿತ್ತಲಮಕ್ಕಿ ಅಭಿನಂದನೆಗಳನ್ನು ತಿಳಿಸಿದ್ದಾರೆ.