ಕಳಸ ಲೈವ್ ವರದಿ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 05 ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಳಸ ಘಟಕವು ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಈ ಕುರಿತು ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ಗೆ ಮನವಿ ಸಲ್ಲಿಸಿರುವ ಸಂಘಟನೆಯು, ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ತಾಪಮಾನ ಹೆಚ್ಚಾಗಿರುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದೆ. ವಿದ್ಯುತ್ ಕಡಿತದಿಂದ ಪರೀಕ್ಷಾ ಕೊಠಡಿಗಳಲ್ಲಿ ಬೆಳಕಿನ ಕೊರತೆ ಮತ್ತು ಶಾಖದ ಸಮಸ್ಯೆ ಉಂಟಾಗಿ, ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ಬರಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಪರೀಕ್ಷೆಗಳು ಅತ್ಯಂತ ಪ್ರಮುಖವಾಗಿವೆ. ಆದ್ದರಿಂದ, ಪರೀಕ್ಷಾ ತಯಾರಿ ಮತ್ತು ಪರೀಕ್ಷೆಯ ಅವಧಿಯಾದ ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ ಯಾವುದೇ ಕಾರಣಕ್ಕೂ ವಿದ್ಯುತ್ ಕಡಿತ ಮಾಡಬಾರದು ಮತ್ತು ನಿರಂತರ ವಿದ್ಯುತ್ ಪೂರೈಕೆಯನ್ನು ಕಾಯ್ದುಕೊಳ್ಳಬೇಕು ಎಂದು ಎಬಿವಿಪಿ ಆಗ್ರಹಿಸಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಪರಿಗಣಿಸಿ ಮೆಸ್ಕಾಂ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಎಬಿವಿಪಿ ಕಳಸ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
